ಹಾಸನ: ಜಿಲ್ಲೆಯ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗುತ್ತಿರುವ ಜಲ್ ಜೀವನ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಬಿಲ್‌ಗಳನ್ನು ಪಾವತಿಸುವಂತೆ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ಸಂಸದ ಶ್ರೇಯಸ್ ಪಟೇಲ್ ಮನವಿ ಸಲ್ಲಿಸಿದರು.
ಜಿಲ್ಲೆಗೆ ಒಟ್ಟು 1,04,491.17 ಲಕ್ಷ ರೂ. ಅನುದಾನ ಮಂಜೂರಾಗಿದ್ದರೂ, ಇದುವರೆಗೆ ಕೇವಲ 40,448.15 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದ್ದು, ಇನ್ನೂ 64,043.02 ಲಕ್ಷ ರೂ. ಅನುದಾನ ಬಾಕಿಯಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಅನುದಾನ ಬಿಡುಗಡೆಯ ವಿಳಂಬದಿಂದಾಗಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ತೀವ್ರ ಅಡಚಣೆ ಉಂಟಾಗಿದ್ದು, ಕುಡಿಯುವ ನೀರಿನ ಸಂಪರ್ಕ ಒದಗಿಸುವ ಕಾರ್ಯವೂ ಮಂದಗತಿಯಲ್ಲಿ ಸಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ಬಾಕಿ ಬಿಲ್‌ಗಳನ್ನು ತೆರವುಗೊಳಿಸಲು ತಕ್ಷಣ 15,906.05 ಲಕ್ಷ ರೂ. ಅಗತ್ಯವಿದೆ. ಅನುದಾನ ತಡವಾಗುತ್ತಿರುವುದರಿಂದ ಯೋಜನೆಯ ಪರಿಣಾಮಕಾರಿ ಜಾರಿಗೆ ತೊಂದರೆ ಉಂಟಾಗುತ್ತಿದೆ ಎಂಬುದನ್ನು ಉಲ್ಲೇಖಿಸಲಾಗಿದೆ.
