ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆ ಹಾಗೂ ಬಿರುಗಾಳಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಭೂಕುಸಿತ, ಪ್ರವಾಹ ಮತ್ತು ಇತರ ಪ್ರಕೃತಿ ವಿಕೋಪಗಳ ಅಪಾಯ ಹೆಚ್ಚಾಗಿದೆ. ಸಾರ್ವಜನಿಕರ ಜೀವ ಹಾಗೂ ಆಸ್ತಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಾಲೂಕು ತಹಶೀಲ್ದಾರ್ ಸುಪ್ರೀತಾ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರಕಾರ, ಮುಂದಿನ ಆದೇಶದವರೆಗೆ ತಾಲೂಕಿನ ಎಲ್ಲಾ ಜಲಪಾತಗಳು, ನದಿಗಳು, ಹಳ್ಳಗಳು, ಗುಡ್ಡ ಪ್ರದೇಶಗಳು ಹಾಗೂ ಇತರೆ ಅಪಾಯಕಾರಿ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ತಾಲೂಕಿನಲ್ಲಿರುವ ಎಲ್ಲಾ ಹೋಂಸ್ಟೇ ಹಾಗೂ ರೆಸಾರ್ಟ್ ಮಾಲೀಕರು ಯಾವುದೇ ಕಾರಣಕ್ಕೂ ಪ್ರವಾಸಿಗರಿಗೆ ಟ್ರೆಕ್ಕಿಂಗ್ ಅಥವಾ ಅಪಾಯಕಾರಿ ಪ್ರದೇಶಗಳಿಗೆ ಭೇಟಿ ನೀಡುವ ವ್ಯವಸ್ಥೆ ಕಲ್ಪಿಸಬಾರದು ಎಂದು ಸೂಚಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿ ಪ್ರವಾಸಿಗರಿಗೆ ಇಂತಹ ವ್ಯವಸ್ಥೆ ಕಲ್ಪಿಸಿದರೆ, ಸಂಭವಿಸುವ ಯಾವುದೇ ಅನಾಹುತಕ್ಕೆ ಸಂಬಂಧಪಟ್ಟ ಹೋಂಸ್ಟೇ ಹಾಗೂ ರೆಸಾರ್ಟ್ ಮಾಲೀಕರೇ ನೇರ ಹೊಣೆಗಾರರಾಗಲಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಸರ್ಕಾರದ ಆದೇಶವನ್ನು ಉಲ್ಲಂಘಿಸಿ ನಿಷೇಧಿತ ಪ್ರದೇಶಗಳಿಗೆ ಪ್ರವೇಶಿಸುವವರು ಅಥವಾ ಇತರರಿಗೆ ಅವಕಾಶ ಕಲ್ಪಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೇರಿದಂತೆ ಅನ್ವಯವಾಗುವ ಕಾನೂನುಗಳಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.
ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಅಪಾಯಕಾರಿ ಪ್ರದೇಶಗಳಿಗೆ ತೆರಳದಂತೆ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಮನವಿ ಮಾಡಿದ್ದಾರೆ.
