ಹಾಸನ: ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ತಾಯಿ-ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ನಗರದ ಉದಯಗಿರಿ ಬಡಾವಣೆಯಲ್ಲಿ ನಡೆದಿದೆ.
ಘಟನೆಯಲ್ಲಿ ದಿವ್ಯಮಣಿ (55) ಹಾಗೂ ಅವರ ಪುತ್ರಿ ಮಾಲತಿ (25) ಗಾಯಗೊಂಡಿದ್ದಾರೆ.
ಪಶುವೈದ್ಯ ನಾಗೇಂದ್ರ ಅವರ ಮನೆಯಲ್ಲಿ ದಿಲೀಪ್ ಬಾಡಿಗೆಗೆ ವಾಸವಿದ್ದರು. ಇಂದು ರಾತ್ರಿ ಮನೆಯಲ್ಲಿ ದಿವ್ಯಮಣಿ ಹಾಗೂ ಮಾಲತಿ ಅಡುಗೆ ಮಾಡುತ್ತಿದ್ದ ವೇಳೆ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ.
ಸ್ಫೋಟದ ರಭಸಕ್ಕೆ ಮನೆಯ ಮೇಲ್ಚಾವಣಿ ಹಾರಿ ಹೋಗಿದ್ದು, ತಾಯಿ-ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
