ಹಾಸನ: ನಗರದ ಚನ್ನಪಟ್ಟಣ ಸರ್ಕಲ್ ಬಳಿ ಹಾಡಹಗಲೇ ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಘಟನೆ ನಡೆದಿದ್ದು, ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ಮಣಿ ಅಲಿಯಾಸ್ ಮಣಿಕಂಠ (35) ಕೊಲೆಯಾದ ವ್ಯಕ್ತಿ.
ಮಣಿಕಂಠ ಅವರು ನಗರದ 80 ಅಡಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ 2 ಗಂಟೆಗೆ ತಮ್ಮದೇ ಮನೆಯ ಗೃಹಪ್ರವೇಶ ಕಾರ್ಯಕ್ರಮವಿದ್ದ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್‌ನಿಂದ ಮನೆಗೆ ತೆರಳಿದ್ದರು ಎನ್ನಲಾಗಿದೆ.
ಎಪಿಎಂಸಿ ವರೆಗೆ ಬೈಕ್‌ನಲ್ಲಿ ಡ್ರಾಪ್ ಪಡೆದುಕೊಂಡು ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಮಣಿಕಂಠನ ಮೇಲೆ ದಾಳಿ ನಡೆಸಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಕೋ ತಂಡವೂ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಪ್ರಕರಣವನ್ನು ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *