ಶ್ರವಣಬೆಳಗೊಳ: ಶ್ರೀಕ್ಷೇತ್ರ ಶ್ರವಣಬೆಳಗೊಳದಲ್ಲಿ ನಡೆದ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗಾಗಿ ಸಮ್ಮೇಳನಾಧ್ಯಕ್ಷರಾಗಿದ್ದ ದಿ. ಡಾ. ಸಿದ್ದಲಿಂಗಯ್ಯ ಅವರ ಹೆಸರಿನಲ್ಲಿ ಸ್ಥಾಪಿತವಾಗಿರುವ ಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪುರಸ್ಕಾರಕ್ಕೆ 2024ನೇ ಸಾಲಿಗೆ ಜನಪದ ಗಾಯಕ ಎಚ್.ಜನಾರ್ಧನ್(ಜನ್ನಿ) ಮತ್ತು 2025ನೇ ಸಾಲಿಗೆ ಶೂದ್ರ ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಶ್ರವಣಬೆಳಗೊಳದ ಚಾವುಂಡರಾಯ ಸಭಾಂಗಣದಲ್ಲಿ ಸೆ.18 ರ ಬೆಳಿಗ್ಗೆ 11.30ಕ್ಕೆ ನಡೆಯಲಿದೆ.
ಶ್ರೀಕ್ಷೇತ್ರ ಶ್ರವಣಬೆಳಗೊಳದ ದಿಗಂಬರ ಜೈನ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಅವರು ಕಾರ್ಯಕ್ರಮ ಉದ್ಘಾಟಿಸಿ ದಿವ್ಯ ಸಾನಿಧ್ಯ ವಹಿಸುವರು.
ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ವಹಿಸಲಿದ್ದು, ಡಾ.ಸಿದ್ದಲಿಂಗಯ್ಯ ಅವರ ಶ್ರೀಮತಿ ರಮಾಕುಮಾರಿ, ಮಗಳು ಡಾ.ಮಾನಸ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಹಾಸನ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ ಹಾಜರಿರುವರು.
