ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿ ಎಸ್. ಅಂಕನಹಳ್ಳಿ ಗ್ರಾಮದ ಬಳಿ ಯುವಕನೊಬ್ಬನ ಶವ ಪತ್ತೆಯಾಗಿದ್ದು ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.
ಮೃತ ಯುವಕನನ್ನು ನರಸಿಂಹನಾಯಕ ನಗರ, ಹೊಳೆನರಸೀಪುರ ಮೂಲದ ಸುದೀಪ್ (24) ಎಂದು ಗುರುತಿಸಲಾಗಿದೆ. ಹಾಸನದ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಸುದೀಪ್, ಮೈಸೂರ ಜಿಲ್ಲೆಯ ಕೆ.ಆರ್.ನಗರ ಮೂಲದ ಯುವತಿಯೊಂದನ್ನು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದಾನೆಂದು ತಿಳಿದುಬಂದಿದೆ.
ಲವ್ ಬ್ರೇಕಪ್ ಹಿನ್ನೆಲೆ ಯುವತಿಯವರ ಕಡೆಯವರೇ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ಸುದೀಪ್‌ನನ್ನು ಮಾರ್ಗಮಧ್ಯೆ ಅಡ್ಡಗಟ್ಟಿ ಹಂತಕರು ಕೊಲೆಮಾಡಿ ಶವವನ್ನು ರಾಷ್ಟ್ರೀಯ ಹೆದ್ದಾರಿಯ ಪಕ್ಕಕ್ಕೆ ಎಳೆದು ಹಾಕಿ ಅಪಘಾತದಂತೆ ತೋರಿಸಲು ಯತ್ನಿಸಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.
ಶವದ ಮೇಲೆ ಗಿಡಗಳನ್ನು ಮುಚ್ಚಿ ಸ್ಥಳದಿಂದ ಪರಾರಿಯಾಗಿರುವ ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಪೊಲೀಸರು ಚಟುವಟಿಕೆ ಆರಂಭಿಸಿದ್ದಾರೆ.
ಸ್ಥಳಕ್ಕೆ ಹಳ್ಳಿಮೈಸೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *